ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ: ಎಲ್ಲೆಲ್ಲಿ ಮಳೆಯಾಗಿದೆ ನೋಡಿ!

masthmagaa.com:

ರಾಜ್ಯದಲ್ಲಿ ಮಳೆ ಆರ್ಭಟ ಜೋರಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗೋಳಿಹೊಳೆ ಎಂಬಲ್ಲಿ ಅತಿಹೆಚ್ಚು 180.5 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ, ಉಳಿದೆಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು. ಶಿವಮೊಗ್ಗ, ಉತ್ತರ ಕನ್ನಡ, ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಹಾಸನ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ನೀರಿನ ಮೂಲಗಳು ಭರ್ತಿಯಾಗಿವೆ. ಉತ್ತರ ಕನ್ನಡ ಜಿಲ್ಲೆಯ ಮಾರ್ಕವಾಡ ಗ್ರಾಮದಲ್ಲಿ ಮನೆಯ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ಕಾರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಾರು ಪತ್ತೆಯಾದ ಸ್ಥಳದಿಂದ 250 ಮೀಟರ್ ದೂರದಲ್ಲಿ ಒಬ್ಬರ ಮೃತದೇಹ ಸಿಕ್ಕಿದ್ದು ಇನ್ನೊಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಎರಡು ಜೀವನದಿಗಳು ಕೃಷ್ಣಾ ಮತ್ತು ಕಾವೇರಿಯ ನೀರಿನ ಮಟ್ಟ ಹೆಚ್ಚಾಗಿದ್ದು ನದಿ ತೀರದ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಮೈಸೂರಿನಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ʻಜೀವಹಾನಿ, ಮನೆ ಕುಸಿತದ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯ ಕೈಗೊಳ್ಳಲು 739 ಕೋಟಿ ರೂಪಾಯಿ ನೀಡಲಾಗಿದೆ. ಹೀಗಾಗಿ ಪರಿಹಾರ ಕಾರ್ಯ ಕೈಗೊಳ್ಳಲು ಹಣದ ಕೊರತೆ ಇಲ್ಲ. ಎಲ್ಲ ರೀತಿಯ ಕ್ರಮಕೈಗೊಳ್ಳೋಕೆ ಸರ್ಕಾರ ಬದ್ದ ಅಂತ ಹೇಳಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರೋ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ʻಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರದ ಮಂತ್ರಿಗಳು, ಶಾಸಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ’ ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

-masthmagaa.com

Contact Us for Advertisement

Leave a Reply