ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ? ಇಲ್ಲಿದೆ ನೋಡಿ ಹವಾಮಾನ ಮಾಹಿತಿ!

masthmagaa.com:

ರಾಜ್ಯದ ಹಲವೆಡೆ ಇವತ್ತು ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಡಾ ಎಂಬಲ್ಲಿ ಅತಿಹೆಚ್ಚು 248 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಬಹುತೇಕ ಕಡೆ ಭಾರಿ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಲ್ಲಿ ಕೆಲವೊಂದು ಕಡೆ ಸಾಧಾರಣ, ಉಳಿದಂತೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಉತ್ತರ ಒಳನಾಡು ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧರಣ ಮಳೆ ಕೆಲವೊಂದು ಕಡೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಜಿಲ್ಲೆಗಳ ಬಹುತೇಕ ಕಡೆ ಚದುರಿದಂತೆ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ. ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಧಾರಾಕಾರ ಮಳೆಯಾಗಿದ್ದು, ತಗ್ಗು ಪ್ರದೇಶಗಳೆಲ್ಲಾ ಜಲಾವೃತವಾಗಿವೆ. ಮಂಗಳೂರು ನಗರದ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಗುರುವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ರು. ಅಲ್ದೇ ಇದೇ ರೀತಿ ಮುಂದುವರೆದ್ರೆ ಪರಿಸ್ಥಿತಿಯನ್ನ ಅವಲೋಕಿಸಿ ಮುಂದಿನ ರಜೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply